ಕುಶಾಲನಗರ: ಹಾರಂಗಿ ಅಣೆಕಟ್ಟೆ ಸಮೀಪದ ಅನೇಕ್ಯಾಂಪ್ ಬಳಿ ಖಾಸಗಿ ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ ಸಂಸ್ಥೆಯ ಬೋಟ್ ಪಲ್ಟಿಯಾಗಿ ಗುಜರಾತ್ ಮೂಲದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ದಂಪತಿಯೊಂದಿಗೆ ಬೋಟಿಂಗ್‌ಗೆ ತೆರಳಿದ್ದ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗುಜರಾತ್ ಮೂಲದ ದಂಪತಿ ತಮ್ಮ ಇಬ್ಬರು ಮಕ್ಕಳೊಂದಿಗೆ ಬೋಟಿಂಗ್‌ಗೆ ತೆರಳಿದ್ದರು. ಈ ವೇಳೆ ಬೋಟ್ ತಿರುವು ಪಡೆಯುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಪರಿಣಾಮ ದಂಪತಿ ನೀರಿನಲ್ಲಿ ಬೋಟ್ ಅಡಿಯಲ್ಲಿ ಸಿಲುಕಿಕೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಿಂದ ಇಬ್ಬರು ಮಕ್ಕಳು ಪಾರಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ದುರಂತದ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಬೋಟ್ ಪಲ್ಟಿಯಾಗಲು ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

ಪ್ರತಿಕ್ರಿಯೆಗಳು